ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ಹಾಗೂ ರೂ. 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ (48) ಶಿಕ್ಷೆಗೆ ಒಳಗಾದ ಆರೋಪಿ. ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಬಾಲಕಿ 2022ರ ಮಾರ್ಚ್ 3ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಬಾಬಿ ವಿರುದ್ಧ ಆರೋಪ ಸಾಬೀತಾಗಿದ್ದು ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಕಾರಾಗೃಹ ಮತ್ತು ರೂ. 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.










