ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ.

31

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಯಾವುದೇ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿಯನ್ನು ನೀಡುತ್ತಿದ್ದಾರೆ. ಅಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.