ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗಿ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಆರೋಗ್ಯವಾಗಿ ಬಂದಿದ್ದೇನೆ, ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದೇನೆ. ಕೊರೊನಾ ನಿಯಂತ್ರಣಕ್ಕೆ ಸಚಿವರು ಏನೇನು ಮಾಡಬೇಕು ಎಂದು ಸೂಚನೆ ಕೊಡಲಿದ್ದೇನೆ. ಮುಂದಿನ ದಿನಗಳಲ್ಲಿ ಕೊರೋನಾ ತಡೆಗಟ್ಟುವಿಕೆಗೆ ರಾಜಧಾನಿ ಮತ್ತು ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುವುದು. ಈಗಾಗಲೇ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗದ ಸ್ಥಿತಿಗೆ ಬಂದು ತಲುಪಿದ್ದೇವೆ. ಹಾಗಾಗಿ, ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ, ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ತಡೆಯಲು ಇದನ್ನು ಬಿಟ್ಟು ಬೇರೆ ಯಾವುದೇ ಮಾರ್ಗವಿಲ್ಲ. ಮಾಸ್ಕ್ ಧರಿಸದೇ ದಂಡ ಕಟ್ಟುವ ಸನ್ನಿವೇಶ ತಂದುಕೊಳ್ಳಬೇಡಿ, ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ, ಕೊರೊನಾ ವೈರಸ್ ತಡೆಗಟ್ಟುವಲ್ಲಿ ರಾಜ್ಯದ ಜನತೆ ಸಹಕಾರ ಕೊಡಿ. ಅನಗತ್ಯವಾಗಿ ಮಾರ್ಗಸೂಚಿ ಉಲ್ಲಂಘಿಸಿ ಪೊಲೀಸರಿಗೆ ದಂಡ ವಿಧಿಸಲು ಅವಕಾಶ ಕೊಡಬಾರದು ಜನರಿಗೆ ಕರೆ ನೀಡಿದರು.










