ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, 6 ದಿನ ಬದಲಾಗಿ 2 ದಿನ ಅಂದರೆ ಇವತ್ತು ಮತ್ತು ಜುಲೈ 22ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಯಾವುದೇ ಅಡಚಣೆ ಆಗದಂತೆ ಕ್ರಮವಹಿಸಲು ಪರೀಕ್ಷಾ ಮಂಡಳಿಯೂ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕಾರ್ಯದಲ್ಲಿ ತೊಡಗುವ ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕಿಸಲಾಗಿದೆ. ಪರೀಕ್ಷಾ ಕೇಂದ್ರ, ಕೊಠಡಿಗಳ ಸಂಖ್ಯೆ ಹೆಚ್ಚಿಸಲಾಗಿದೆ.
ಮೂರು ಕೋರ್ ವಿಷಯಗಳಿಗೆ ಒಂದೇ ಪ್ರಶ್ನೆ ಪತ್ರಿಕೆಯಲ್ಲಿ ಉತ್ತರ ನೀಡಬೇಕಿದೆ. 3 ಕೋರ್ ಸಬ್ಜೆಕ್ಟ್ ವಿಜ್ಞಾನ, ಸಮಾಜ, ಗಣಿತಕ್ಕೆ ಪರೀಕ್ಷೆ ನಡೆಯಲಿದ್ದು, ಪ್ರತಿ ವಿಷಯಕ್ಕೆ ತಲಾ 40 ಅಂಕ ಇರಲಿದೆ. ಬಹು ಆಯ್ಕೆ ಪ್ರಶ್ನೆ ಮಾದರಿಯ ಪ್ರಶ್ನೆಪತ್ರಿಕೆ ಇರಲಿದ್ದು, ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಕೂರಲು ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಡೆಸ್ಕ್ ಗೆ ಒಬ್ಬರೇ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 8,76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 4,885 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೆ ಅಂತಹವರಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲಿಯೇ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುತ್ತೆ.










