ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳಲಿವೆ.
ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. 2023-24 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ನೋಂದಣಿ ಮಾಡಿಕೊಂಡಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವೇಳಾಪಟ್ಟಿ:
ಮಾರ್ಚ್ 25: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ (ಪ್ರಥಮ ಭಾಷೆ).
ಮಾರ್ಚ್ 27: ಸಮಾಜ ವಿಜ್ಞಾನ
ಮಾರ್ಚ್ 30: ವಿಜ್ಞಾನ
ಏಪ್ರಿಲ್ 2: ಗಣಿತ
ಏಪ್ರಿಲ್ 3: ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್)
ಏಪ್ರಿಲ್ 4: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ (ತೃತೀಯ ಭಾಷೆ)
ಏಪ್ರಿಲ್ 6: ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ).










