ಬೆಂಗಳೂರು : ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವಾದ ಇಂದು ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.
ನನ್ನ ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲರು, ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಪಥದಲ್ಲಿ ರಾಜ್ಯ ಮುಂಚೂಣಿಯಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮಾದರಿಯನ್ನು ಸರ್ಕಾರ ಅನುಸರಿಸುತ್ತಿದೆ. ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರಿನ ಸೌಲಭ್ಯ ನೀಡಲಾಗಿದೆ. ರಾಜ್ಯದ ಪ್ರತಿ ಶಾಲೆಯಲ್ಲಿ ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ರೂಪಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಣೆ ಮಾಡಲಾಗಿದೆ. ದೇಶದಲ್ಲೇ ಎನ್ ಇಪಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ರೈತರು, ನೇಕಾರರು, ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ರೈತಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ ನೀಡಲಾಗಿದೆ. 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಲೋಕಾರ್ಪಣೆ ಮಾಡಲಾಗಿದೆ. ಕೃಷಿ ಸಂಜೀವಿನಿ ಯೋಜನೆಯಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಚಾಲನೆ ನೀಡಲಾಗಿದೆ. ಮೋದಿಯವರು ಮುಂದಿನ 25 ವರ್ಷಕ್ಕೆ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ರಾಜ್ಯವು ಕ್ರಮಿಸುವ ವಿಶ್ವಾಸ ಇದೆ ಎಂದರು.
150 ಕೋಟಿ ರೂ. ವೆಚ್ಚದಲ್ಲಿ 1 ಲಕ್ಷದ 614 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ನೀಡಲಾಗುತ್ತಿದೆ. ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ಹೊಸ ಯೋಜನೆಯಡಿ ಒಂದು ಸಾವಿರ ಬಹುಮಹಡಿ ವಿದ್ಯಾರ್ಥಿ ನಿಲಯ ಸಮುಚ್ಚಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಅನುದಾನದಲ್ಲಿ ಸುಮಾರು 268.98 ಕೋಟಿ ರೂ. ವೆಚ್ಚದಲ್ಲಿ 4244 ಹೊಸ ಅಂಗನವಾಡಿ ಕೇಂದ್ರಗಳನ್ನ ತೆರಯಲು ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಎಸ್ ಸಿ, ಎಸ್ ಟಿ ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ನಿಗಮದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಬೆಳಗಾವಿಯಲ್ಲಿ ತೆರೆಯಲಾಗಿದೆ. ಬಾಲ್ಯವಿವಾಹ ಹೆಚ್ಚಳವಿರುವ 11 ಜಿಲ್ಲೆಗಳಲ್ಲಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ನಮ್ಮ ಕ್ಲಿನಿಕ್ಗಳನ್ನು ಆರಂಭಗೊಂಡಿವೆ. ಚಾಮರಾಜನಗರದಲ್ಲಿ ವಿಶೇಷ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಆಸ್ಪತ್ರೆ ತೆರೆಯಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದ ಸಾಧನೆ, ಯೋಜನೆಗಳಿಗೆ ಸಂಬಂಧಿಸಿದಂತೆ 34 ಪುಟಗಳ ಭಾಷಣ ಪುಸ್ತಕವನ್ನು ರಾಜ್ಯಪಾಲರು ಓದಿದರು. ಸುಮಾರು ಒಂದು ಗಂಟೆ ಕಾಲ ಭಾಷಣ ಮಾಡಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ರಮೇಶ್ ಜಾರಕಿಹೊಳಿ ಸೇರಿದಂತೆ ಮೂರು ಪಕ್ಷಗಳ ಹಲವು ನಾಯಕರು ಅಧಿವೇಶನಕ್ಕೆ ಗೈರಾಗಿದ್ದರು.
ಇಂದಿನಿಂದ ಆರಂಭಗೊಂಡು 11 ದಿನಗಳ ಕಾಲ ನಡೆಯುವ ವಿಧಾನಸಭೆ ಅಧಿವೇಶನ ಹಿನ್ನೆಲೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಎಲ್ಲಾ ಶಾಸಕರು ತಪ್ಪದೆ ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದರು.










