ಇಂದು ತ್ರಿಪುರಾ ವಿಧಾನಸಭೆ ಚುನಾವಣೆ – 259 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…

70
firstsuddi

ಅಗರ್ತಲ: ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.

259 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಈಶಾನ್ಯ ರಾಜ್ಯದ 3,337 ಮತಗಟ್ಟೆಗಳಲ್ಲಿ ಒಟ್ಟು 28.13 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ 55 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ 13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸಿಪಿಎಂನ 47 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ತಿಪ್ರಾ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ತೃಣಮೂಲ ಕಾಂಗ್ರೆಸ್ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 58 ಸ್ವತಂತ್ರ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

25 ವರ್ಷಗಳಿಂದ ಎಡಪಕ್ಷದ ಆಡಳಿತವಿದ್ದ ತ್ರಿಪುರಾದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಮತ್ತು ಅಭೂತಪೂರ್ವ ಗೆಲುವು ದಾಖಲಿಸಿ ಆಡಳಿತದ ಗದ್ದುಗೆಗೆ ಏರಿತ್ತು. ಬಳಿಕ ವಿಪ್ಲವ್ ಕುಮಾರ್ ದೇವ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ, ಕಳೆದ ವರ್ಷ ಮೇ ತಿಂಗಳಲ್ಲಿ ಅವರನ್ನು ಬದಲಾಯಿಸಿ ಮಾಣಿಕ್ ಶಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.