ಬೆಳಗಾವಿ: ಇನ್ಸ್ಟಾಗ್ರಾಮ್ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವಂತಹ ಘಟನೆಯೊಂದು ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆಯಲಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ಸುಂಕದ ಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಇನ್ಸ್ಟಾಗ್ರಾಮ್ನಲ್ಲಿ ಸಕ್ರಿಯರಾಗಿದ್ದರು. ಆರೋಪಿಗಳು ಹುಡುಗಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಪ್ರಜ್ವಲ್ ಗೆ ಮೆಸೇಜ್ ಕಳುಹಿಸುತ್ತಿದ್ದರು.
ಮೆಸೇಜ್ ಮಾಡುತ್ತಿರುವುದು ಹುಡುಗ ಎಂದು ಗೊತ್ತಾಗುತ್ತಿದ್ದಂತೆಯೇ ಪ್ರಜ್ವಲ್ ಮೆಸೇಜ್ನಲ್ಲಿ ಅವಾಚ್ಯವಾಗಿ ಬೈದಿದ್ದಾನೆ. ಇದರಿಂದ ಕೆರಳಿ ಗ್ಯಾಂಗ್ ಕಟ್ಟಿಕೊಂಡು ಬಂದು ಪ್ರಜ್ವಲ್ ಜತೆಗೆ ಜಗಳ ಮಾಡಿದ್ದಾರೆ. ಬಳಿಕ ಪ್ರಜ್ವಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಜ್ವಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










