ಬೆಂಗಳೂರು : ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನಲೆ ಕೂಡಲೇ ಈಶ್ವರಪ್ಪ ಅವರನ್ನು 302ರ ಸೆಕ್ಷನ್ ಅಡಿ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಈಶ್ವರಪ್ಪ ಅವರೇ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಿರುವ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಈಶ್ವರಪ್ಪ ಅವರ ವಿರುದ್ಧ ಸೆಕ್ಷನ್ 302 ರಡಿ ಕೇಸ್ ದಾಖಲಿಸಬೇಕು ಮತ್ತು ತಕ್ಷಣ ಈಶ್ವರಪ್ಪ ಅವರನ್ನು ಬಂಧಿಸಬೇಕು. ಈ ಕೂಡಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕೊಲೆ ಆರೋಪ ಎದುರಿಸುತ್ತಿರುವ ಈಶ್ವರಪ್ಪ ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಕಾಶ ನೀಡಬಾರದು. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಬಹುದು, ಇದೊಂದು ಗಂಭೀರ ಪ್ರಕರಣವಾಗಿದೆ. ಅಷ್ಟೇ ಅಲ್ಲದೇ ಇದೊಂದು ಭ್ರಷ್ಟಾಚಾರ ಪ್ರಕರಣವೂ ಆಗಿದೆ. ಗುತ್ತಿಗೆ ಕಾಮಗಾರಿಯ ಬಾಕಿ ಅನುದಾನ ಬಿಡುಗಡೆ ಮಾಡಲು ಸಚಿವರು ಹೆಚ್ಚಿನ ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ. ಆತನಿಗೆ ಈ ಹಣ ಹೊಂದಿಸಲು ಸಾಧ್ಯವಾಗದ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಿದರು.
ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಕ್ಕೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಆತ್ಮಹತ್ಯೆಗೆ ಶರಣಾಗುವ ಮುನ್ನ ಆತ ಈಶ್ವರಪ್ಪ ಅವರೇ ನನ್ನ ಸಾವಿಗೆ ನೇರ ಕಾರಣ ಎಂದು ಆರೋಪ ಮಾಡಿರುವುದರಿಂದ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.
ನಗರದ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಈ ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ ಅಂದರೆ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಸತ್ಯ ಇದೆಯೋ ಇಲ್ಲವೋ ಗೊತ್ತಿಲ್ಲ. ಮೊದಲು ಎಫ್ ಐಆರ್ ದಾಖಲಿಸಬೇಕು. ಎಫ್ ಐಆರ್ ಆಧಾರದ ಮೇಲೆ ತನಿಖೆ ಕೈಗೊಳ್ಳಬೇಕು. ಡೆತ್ ನೋಟ್ ಬಂದಾಗ ಎಫ್ ಐಆರ್ ದಾಖಲಿಸುತ್ತಾರೆ. ಇಂತಹ ಕೇಸ್ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಾರೆ. ಹಾಗಾಗಿ ಪೊಲೀಸರು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.










