ನವದೆಹಲಿ : ಉಕ್ರೇನ್ ಮೇಲಿನ ರಷ್ಯಾ ದಾಳಿ ಮುಂದುವರಿದಿದ್ದು, ಯುದ್ಧ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉನ್ನತ ಅಧಿಕಾರಿಗಳ ತುರ್ತು ಸಭೆ ಕರೆದು, ನವೀನ್ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.
ಉಕ್ರೇನ್-ರಷ್ಯಾ ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೀನ್ ಮೃತದೇಹ ಆದಷ್ಟು ಬೇಗ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
ಮಾರ್ಚ್ 1 ರಂದು ಉಕ್ರೇನ್ ಮೇಲೆ ರಷ್ಯಾ ನಡೆಸಿದ ಶೆಲ್ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಬಲಿಯಾಗಿದ್ದರು.










