ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ನಿನ್ನೆ ರಾತ್ರಿ ನಕ್ಸಲ್ ನಿಗ್ರಹ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ನಕ್ಸಲ್ ಓಡಾಟದ ಅನುಮಾನ ವ್ಯಕ್ತವಾಗಿದ್ದರಿಂದ ಎಎನ್‍ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆಗೆ ಇಳಿದಿತ್ತು. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್‍ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಉಳಿದ ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್‍ಎಫ್ ಕೂಂಬಿಂಗ್ ಮುಂದುವರಿದಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ ಎಂದು ಎಎನ್‍ಎಫ್ ಮೂಲಗಳು ತಿಳಿಸಿವೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಕ್ಸಲ್ ಮುಖಂಡನ ಹತ್ಯೆ ಬಗ್ಗೆ ಪೊಲೀಸರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.










