ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಉತ್ತರ ಕನ್ನಡ ಶಾಸಕರ ಜೊತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಸಚಿವರು, ಕುಮಟಾ ಭೌಗೋಳಿಕವಾಗಿ ಉತ್ತರ ಕನ್ನಡ ಜಿಲ್ಲೆಯ ಮಧ್ಯ ಭಾಗದಲ್ಲಿ ಇದೆ. ಇದರಿಂದಾಗಿ ಕುಮಟಾದಲ್ಲಿ ಆಸ್ಪತ್ರೆ ಮಾಡಲು ಸಲಹೆ ಬಂದಿದೆ. ಈ ಹಿನ್ನೆಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟ ಆರೋಗ್ಯ ಸೇವೆಗಳು ಜಿಲ್ಲೆಯ ಜನರಿಗೆ ಸಿಗಬೇಕು. ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕೆಲಸ ಆಗಬೇಕು. ಇದರ ಜೊತೆಗೆ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇವೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಲಿದೆ. ಫೈಲ್ ಆರ್ಥಿಕ ಇಲಾಖೆಗೆ ಹೋಗಿದೆ. ಸೆಷನ್ ಆದ ಕೂಡಲೇ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಈ ಬಗ್ಗೆ ಇನ್ನೂ ಹೆಚ್ಚಿನ ಕ್ರಮ ವಹಿಸುತ್ತೇನೆ ಎಂದರು.
ಈ ವೇಳೆ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಒದಗಿಸಬೇಕು, ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರ್ಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಇರುವಂತಹ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಡರೆ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ನಮ್ಮ ಎಲ್ಲಾ ಬೇಡಿಕೆಗಳು ಈಡೇರುತ್ತದೆ ಅಂತ ಹೇಳಿದ್ದಾರೆ.










