ಬೆಂಗಳೂರು: ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಸ್ಥಿರಾಸ್ತಿಗಳ ನೋಂದಣಿಗಾಗಿ ಗ್ರಾಮಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತೆಗಳನ್ನು ವಿತರಿಸುವ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನೇತೃತ್ವದಲ್ಲಿ ಬುಧವಾರ ವಿಕಾಸಸೌಧದಲ್ಲಿ ಸಭೆ ನಡೆಯಿತು. ಈ ವೇಳೆ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ತ್ವರಿತವಾಗಿ ವಿತರಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಆಸ್ತಿಗಳಿಗೂ ಇ–ಖಾತಾ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಿರುವ ಪ್ರಕ್ರಿಯೆಯಲ್ಲಿ ಇರುವ ಲೋಪಗಳನ್ನು ಸರಿಪಡಿಸಲಾಗುತ್ತಿದೆ. ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ ನಕಲಿ ಖಾತೆಗಳನ್ನು ಸೃಷ್ಟಿಸಿ ಅಕ್ರಮ ಎಸಗುವುದು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು. ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಠಾಣಾ ವ್ಯಾಪ್ತಿಯ ವಿಸ್ತರಣೆ ಮುಂತಾದ ಸಮಸ್ಯೆಗಳಿಗೂ ಪರಿಹಾರೋಪಾಯಗಳನ್ನು ಶಿಫಾರಸು ಮಾಡುವಂತೆ ಕಾರ್ಯಪಡೆ ಅಧ್ಯಕ್ಷರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರಲ್ಲದೆ, ಖಾತಾ ವಿತರಿಸುವಲ್ಲಿ ಭವಿಷ್ಯದಲ್ಲಿ ಎದರಾಗುವ ಸಮಸ್ಯೆಗಳೂ ಸೇರಿದಂತೆ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸುವಂತೆ ನಿರ್ದೇಶನ ನೀಡಿದರು.










