ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ನಾರಾಯಣಮೂರ್ತಿ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಕೆಂಪೇಗೌಡರ ಹೆಸರಲ್ಲಿ ಪ್ರಶಸ್ತಿ ನೀಡುವ ಬಗ್ಗೆ ಚರ್ಚೆ ನಡೆಸಿ ಬಳಿಕ ಮಾತನಾಡಿದ ಅವರು, ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜನ್ಮದಿನವಾಗಿದೆ. ಇವರ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ ಸರ್ಕಾರ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಮೋಹನ್ ದಾಸ್ ಪೈ, ಬಾಲಸುಬ್ರಹ್ಮಣ್ಯಂ, ಶಂಕರಲಿಂಗೇಗೌಡರನ್ನು ಒಳಗೊಂಡ ಸದಸ್ಯರ ಸಮಿತಿ ರಚಿಸಲಾಗಿತ್ತು. ಈ ಬಾರಿ ಮೂರು ಜನರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲು ನಿರ್ಧರಿಸಲಾಗಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ, ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ವಿಚಾರವಾಗಿ ಮಾತನಾಡಿದ ಅವರು, ಪ್ರತಿಮೆ ಕಾಮಗಾರಿ ಬಹುತೇಕ ಮುಗಿದಿದೆ. ಲ್ಯಾಂಡ್ ಸ್ಕೇಪಿಂಗ್ ಆಗಬೇಕಿದೆ, ಅದೂ ಕೂಡ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಉದ್ಘಾಟನೆ ಆಗಲಿದೆ. ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲ ರೀತಿಯ ವ್ಯವಸ್ಥೆ ಮಾಡಲಾತ್ತಿದೆ ಎಂದು ತಿಳಿಸಿದರು.










