ಎಸ್.ಎಂ.ಕೃಷ್ಣ, ನಾರಾಯಣ ಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ…

60
firstsuddi

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಇತ್ತ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಅದರ ಜೊತೆಗೆ ಐದು ಲಕ್ಷ ನಗದು ನೀಡಲಾಗಿದೆ. ಆ ಹಣವನ್ನು ನನಗೆ ವಿದ್ಯಾದಾನ ಮಾಡಿದ ಮೈಸೂರು ರಾಮಕೃಷ್ಣ ಆಶ್ರಮಕ್ಕೆ ನೀಡುವುದಾಗಿ ಘೋಷಿಸಿದರು. 1998-99ರಲ್ಲಿ ರಾಷ್ಟ್ರದ ಸಿಲಿಕಾನ್ ಕೇಂದ್ರ ಯಾವ ನಗರ ಆಗಬೇಕು ಎಂಬ ವಿಷಯದಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ತೀವ್ರ ಪೈಪೋಟಿ ಇತ್ತು. ಅಂತಿಮವಾಗಿ ಬೆಂಗಳೂರು ಯಶಸ್ಸು ಪಡೆಯಿತು. ಅದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಟ್ಟಿದ್ದಕ್ಕೆ ಅಂದಿನ ಪ್ರಧಾನಿಯಾಗಿದ್ದ ಮನಹೋಹನ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದರು.