ತುಮಕೂರು : ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಕಾರಣ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭೇಟಿ ನೀಡಿ ಧೈರ್ಯ ಹೇಳಿದ್ದಾರೆ.
ಜಿಲ್ಲೆಯ ಕೊರಟಗೆರೆ ಮೂಲದ ನಿವಾಸಿಯಾದ ಬಾಲಕಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನೋಂದಣಿ ಅರ್ಜಿ ಸಲ್ಲಿಸಿರಲಿಲ್ಲ. ಜೊತೆಗೆ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಬೇಕಾದ ದಿನಾಂಕ ಪೂರ್ಣಗೊಂಡಿರುವುದರಿಂದ ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಬಾಲಕಿಗೆ ತಿಳಿಸಿದೆ.
ಇದರಿಂದ ಮನನೊಂದ ವಿದ್ಯಾರ್ಥಿನಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಮುಂಜಾನೆಯೇ ಕೊರಟಗೆರೆ ತಾಲೂಕಿನ ಹನುಮಂತಾಪುರ ಗ್ರಾಮದ ಗ್ರೀಷ್ಮಾ ಎನ್. ನಾಯಕ್ ಮನೆಗೆ ಭೇಟಿ ನೀಡಿದ ಸಚಿವರು, ಆಗಸ್ಟ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ವಿದ್ಯಾರ್ಥಿನಿ ಗ್ರೀಷ್ಮಾ ಹಾಗೂ ಆಕೆಯ ಪೋಷಕರಿಗೆ ಭರವಸೆ ನೀಡಿದ್ದಾರೆ.










