ಮುಂಬೈ : ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಸಂಪೂರ್ಣ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
33 ವರ್ಷದ ಈ ವ್ಯಕ್ತಿ ನವೆಂಬರ್ ನ ಕೊನೆ ವಾರದಲ್ಲಿ ದಕ್ಷಿಣ ಆಫ್ರಿಕಾದಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ್ದರು. ಈ ವೇಳೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಯಾವುದೇ ರೀತಿಯ ಗುಣಲಕ್ಷಣ ಕಾಣಸಿಕ್ಕಿಲ್ಲ. ಜೊತೆಗೆ ಆರ್ ಟಿಪಿಸಿಆರ್ ಟೆಸ್ಟ್ ನಲ್ಲೂ ನೆಗೆಟಿವ್ ಬಂದಿದ್ದು, ಅವರನ್ನ ಮನೆಗೆ ಕಳುಹಿಸಲಾಗಿದೆ.
ಸದ್ಯ ಓಮಿಕ್ರಾನ್‌ನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ 1 ವಾರ ಮನೆಯಲ್ಲೇ ಕ್ವಾರಂಟೈನ್ ಆಗಿರಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ 10 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಠಿಣ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ.










