ಚಿಕ್ಕಮಗಳೂರು : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಶಿಫಾರಸ್ಸು ಮಾಡಿರುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಅಂಗೀಕರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಆಜಾದ್ ಪಾರ್ಕ್ ವೃತ್ತದ ಬಳಿ ಜಮಾಯಿಸಿದ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು 341 (3) ಕ್ಕೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಒದಗಿಸುವಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನ್ಯಾಯಬದ್ದವಾದ ವರದಿ ನೀಡಿ 10 ವರ್ಷಗಳಾಗಿದ್ದರೂ ರಾಜ್ಯ ಸರ್ಕಾರ ಇನ್ನೂ ಅದನ್ನು ಅಂಗೀಕರಿಸಿಲ್ಲ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿಗಳಲ್ಲಿರುವ ಹಲವು ಉಪಜಾತಿಗಳು ಅತ್ಯಂತ ಕಡುಬಡತನದಲ್ಲಿವೆ. ಒಳಮೀಸಲಾತಿಯಿಲ್ಲದೆ ಆರ್ಥಿಕವಾಗಿ ದುರ್ಬಲವಾಗಿವೆ ಎಂದ ಅವರು ಆ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಕ್ಷಣ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಕಳೆದ 10 ವರ್ಷಗಳಿಂದ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸದೇ ದಲಿತರನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶ್ರೀಕಾಂತ್ ಈಗಲಾದರೂ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಮಾತನಾಡಿದ ಬಹುತೇಕ ಮುಖಂಡರು ನಮ್ಮ ಮತಗಳಿಂದಲೇ ಅಧಿಕಾರಕ್ಕೆ ಬಂದು ನಮ್ಮನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಈಗಲಾದರೂ ಸ್ಪಂದಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರಿಗೆ ಮನವಿ ಸಲ್ಲಿಸಲಾಯಿತು. ಮಾದಿಗ ಮಹಾಸಭಾದ ಜಿಲ್ಲಾಧ್ಯಕ್ಷ ರಮೇಶ್, ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಈಶಣ್ಣ, ಗೋವಿಂದಪ್ಪ, ತರೀಕೆರೆ ತಾಲ್ಲೂಕು ಸಂಚಾಲಕ ಅಣ್ಣಯ್ಯ, ಮಂಜಪ್ಪ, ನಂಜುಂಡಪ್ಪ, ಮಂಜುನಾಥ್, ಲಕ್ಷ್ಮಣ್, ಮೈಲಾರಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










