ಕಂಬಳ ನೋಡಲು ಮಂಗಳೂರಿನಿಂದ ಬಂದಿದ್ದ ಇಬ್ಬರು ಅಪಘಾತದಲ್ಲಿ ಸಾವು…

121
firstsuddi

ತುಮಕೂರು: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕೋಣಗಳ ಓಟ ನೋಡಲು ಬೆಂಗಳೂರಿನ ಮೂಲೆ ಮೂಲೆಗಳಿಂದ ಆಗಮಿಸಿದ್ದು, ಈ ಕಂಬಳವನ್ನು ನೋಡಲು ಮಂಗಳೂರಿನಿಂದ ಬಂದಿದ್ದ ಇಬ್ಬರು ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.

ಬೋರ್ ವೆಲ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಕಂಬಳ ನೋಡಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಮೃತರನ್ನು ಸದ್ಯ ಕೆಂಜಾರು ನಿವಾಸಿ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.