ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಿನ್ನಲೆಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಕರ್ನಾಟಕದಲ್ಲಿ ಜಾರಿಗೊಳಿಸಲಾದ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಕಡ್ಡಾಯವಾಗಿ ಸಾರ್ವಜನಿಕರು ಕೊರೊನಾ ನಿಯಮಗಳನ್ನು ಪಾಲಿಸಬೇಕು. ಇನ್ನೆರಡು ತಿಂಗಳು ಕೊರೊನಾ ಆರ್ಭಟ ಇರಲಿದ್ದು, ಎಚ್ಚರಿಕೆಯಿಂದ ಇರುವಂತೆ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಮುನ್ನಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಪರಿಸ್ಥಿತಿ ಕಷ್ಟವಾಗಬಹುದು. ಸದ್ಯದ ಪರಿಸ್ಥಿತಿ ಅರ್ಥಮಾಡಿಕೊಂಡು ನಿಯಮ ಪಾಲಿಸಬೇಕು. ತಾಂತ್ರಿಕ ಸಲಹಾ ಸಮಿತಿ ವರದಿ ತರಿಸಿಕೊಂಡು, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿಯೇ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ನೈಟ್ ಕರ್ಫ್ಯೂ, ಅಥವಾ ಲಾಕ್ ಡೌನ್ ಬಗ್ಗೆ ಇನ್ನೂ ಗೊತ್ತಿಲ್ಲ. ಪರಿಸ್ಥಿತಿ ಕೈ ಮೀರಿ ಹೋಗಬಾರದೆಂಬ ಉದ್ದೇಶದಿಂದ ಅನಿವಾರ್ಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕಾಗಿದೆ. ಇದು ಏಕಾಏಕಿ ಮಾಡಿದ ನಿಯಮ ಅಲ್ಲ .ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸದ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಸೂಚಿಸಿದರು.










