ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ : ಹೆಚ್.ಡಿ.ಕುಮಾರಸ್ವಾಮಿ.

78
firstsuddi

ಬೆಂಗಳೂರು : ನಿನ್ನೆ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್ ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ. ಅಯ್ಯೋ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ. ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ವಿರೋಧ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಿದ್ದಾರೆ.