ಕರ್ನಾಟಕಕ್ಕೆ ಬರ ಪರಿಹಾರ ವಿಚಾರ: ಎರಡು ವಾರದಲ್ಲಿ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಸುಪ್ರೀಂ ಸೂಚನೆ…

36
firstsuddi

ನವದೆಹಲಿ: ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಇದರ ಜೊತೆಗೆ ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದರು.

ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್‍ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂವಹನ ನಡೆಸಬಹುದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್ ನೋಟಿಸ್ ನೀಡುವಂತೆ ಮನವಿ ಮಾಡಿದರು. ಮೆಹ್ತಾ ಮಧ್ಯಪ್ರವೇಶಿಸಿ ನೋಟಿಸ್ ನೀಡಬೇಡಿ, ಅನಗತ್ಯ ಸುದ್ದಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

ಸಂಕ್ಷಿಪ್ತ ವಿಚಾರಣೆ ನಡೆಸಿದ ನ್ಯಾಯಪೀಠ, ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಕೇಂದ್ರಕ್ಕೆ ನೋಟಿಸ್ ನೀಡಲು ನಿರ್ಧರಿಸಿತು. ಆದರೆ ತುಷಾರ್ ಮೆಹ್ತಾ, ಈ ವಿಷಯದಲ್ಲಿ ನೋಟಿಸ್ ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕೇಂದ್ರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ನಾವು ಹಿಂತಿರುಗಿ ಬಂದು ಈ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದು ಪೀಠಕ್ಕೆ ತಿಳಿಸಿದರು.