ನವದೆಹಲಿ: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಲ್ಲದೇ, ಕೆಆರ್‌ಎಸ್‌ನಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಈ ಬಾರಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಆದರೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.










