ಕರ್ನಾಟಕದಲ್ಲಿ ಉತ್ತಮ ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ…

232
firstsuddi

ನವದೆಹಲಿ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಸೂದ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಉತ್ತಮ ಮಳೆಯಾಗಿ ಕಾವೇರಿ ಜಲಾಶಯದ ಒಳಹರಿವು ಹೆಚ್ಚಾದರೆ ಮಾತ್ರ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ. ಜೂನ್ ತಿಂಗಳಲ್ಲಿ ಕರ್ನಾಟಕ ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಕೇವಲ 1.72ಟಿಎಂಸಿ ನೀರನ್ನು ಬಿಡುಗಡೆ ಮಾಡಿದ್ದು, ಬಾಕಿ 7.47ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ ಒತ್ತಾಯ ಮಾಡಿತ್ತು. ಅಲ್ಲದೇ ಜುಲೈ ತಿಂಗಳಿನಲ್ಲಿ ಹರಿಸಬೇಕಿದ್ದ 30ಟಿಎಂಸಿ ನೀರನ್ನು ಬಿಡುವಂತೆ ಒತ್ತಡ ಹೇರಿತ್ತು. ಕರ್ನಾಟಕದಲ್ಲಿ ಮುಂಗಾರು ಮಳೆಯಾಗದೆ ನೀರಿನ ಮಟ್ಟ ಕಡಿಮೆ ಇದ್ದು, ಕುಡಿಯಲು ನೀರು ಇಲ್ಲದಂತಾಗಿದೆ. ನೀರಿನ ಮಟ್ಟ ಕಡಿಮೆ ಇರುವುದರಿಂದ ಮಳೆಯಾದರೆ ಮಾತ್ರ ನೀರನ್ನು ಬಿಡಲು ಸಾಧ್ಯ ಎಂದು ಕರ್ನಾಟಕ ಸರ್ಕಾರ ತಿಳಿಸಿತ್ತು. ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದ ವಾದ ಮಂಡನೆಯನ್ನು ಅನುಸರಿಸಿ ಕರ್ನಾಟಕದಲ್ಲಿ ಉತ್ತಮವಾಗಿ ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರನ್ನು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.