ನವದೆಹಲಿ/ಬೆಂಗಳೂರು: ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್ ಮಿತ್ತಲ್ ಅವರನ್ನು ರಾಜಸ್ಥಾನ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಮತ್ತು ನ್ಯಾಯಮೂರ್ತಿ ಎಎಂ ಮ್ಯಾಗ್ರೆ ಅವರನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 28 ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಪ್ರಸ್ತುತ ಬಾಂಬೆ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಆಗಿರುವ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವಂತೆ ಶಿಫಾರಸು ಮಾಡಲಾಗಿತ್ತು.
ಪಿ.ಬಿ. ವರಾಳೆ ಅವರು 1985ರ ಆಗಸ್ಟ್ 12ರಂದು ವಕೀಲರಾಗಿ ನೋಂದಣಿ ಮಾಡಿಕೊಂಡರು. ಎಸ್.ಎನ್. ಲೋಯಾ ಅವರ ಮಾರ್ಗದರ್ಶನದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ಅಭ್ಯಾಸ ಮಾಡಿದರು. ಔರಂಗಾಬಾದ್ ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ 1990 ರಿಂದ 1992ರ ತನಕ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದರು.










