ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ದಿಗ್ವಿಜಯ್ ಸಿಂಗ್ ಸ್ಪಷ್ಟನೆ…

52
firstsuddi

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ದಿಗ್ವಿಜಯ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ನನ್ನ ಜೀವನದ ಉದ್ದಕ್ಕೂ ಕಾಂಗ್ರೆಸ್ ಗಾಗಿ ದುಡಿದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನನ್ನ ನಾಯಕ ಮತ್ತು ನನ್ನ ಹಿರಿಯ, ಆದ್ದರಿಂದ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ. ಬದಲಿಗೆ ನಾನು ಮಲ್ಲಿಕಾರ್ಜುನ ಖರ್ಗೆ ಅವರ ಪರ ನಿಲ್ಲುತ್ತೇನೆ ಎಂದು ದಿಗ್ವಿಜಯ್ ಸಿಂಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ದಿಗ್ವಿಜಯ್ ಸಿಂಗ್ ಅವರು ಕೇಂದ್ರ ಚುನಾವಣಾ ಪ್ರಾಧಿಕಾರದಿಂದ ನಾಮಪತ್ರ ಪಡೆದು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದರು. ಅದಕ್ಕೂ ಮುನ್ನ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಹೆಸರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ರೇಸ್ ನಲ್ಲಿ ಕಾಣಿಸಿಕೊಂಡಿತ್ತು. ಆದರೆ, ರಾಜಸ್ಥಾನದ ರಾಜಕೀಯ ಬೆಳವಣಿಗೆ ನಂತರ ಗೆಹ್ಲೋಟ್ ಹಿಂದೆ ಸರಿಯಬೇಕಾಯಿತು. ಅದರ ನಂತರ ದಿಗ್ವಿಜಯ್ ಸಿಂಗ್ ಅವರ ಹೆಸರು ಮುಂಚೂಣಿಯಲ್ಲಿ ಬಂತು. ಆದರೆ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವೇಶದ ನಂತರ ಅಧ್ಯಕ್ಷ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಸ್ಪರ್ಧಿಸುವುದಿಲ್ಲ ಎಂದು ತಿಳಿದುಬಂದಿದೆ.

ನಾಮಪತ್ರ ಸಲ್ಲಿಸಲು ಸೆ.30ರಂದು(ಇಂದು) ಕೊನೆಯ ದಿನವಾಗಿದ್ದು, ಖರ್ಗೆಯವರು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಹೊರಬೀಳಲಿದೆ.