ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ರಾಜೀನಾಮೆ ನೀಡಿದ ವಿಭಾಕರ್ ಶಾಸ್ತ್ರಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ವಿಭಾಕರ ಶಾಸ್ತ್ರಿ ಟ್ವೀಟ್ ಮಾಡಿದ್ದು ‘ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಜಿ ಪ್ರಧಾನಿಯವರ ಕನಸಿನ ಜೈ ಜವಾನ್, ಜೈ ಕಿಸಾನ್ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಬಿಜೆಪಿಯಲ್ಲಿ ನನ್ನ ಅಜ್ಜ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಐ.ಎನ್.ಡಿ.ಐ.ಎ ಮೈತ್ರಿಕೂಟಕ್ಕೆ ಯಾವುದೇ ಸಿದ್ಧಾಂತವಿಲ್ಲ, ಆದರೆ ಮೋದಿಜಿಯನ್ನು ಸೋಲಿಸುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಸಿದ್ಧಾಂತ ಏನೆಂಬುದನ್ನು ರಾಹುಲ್ ಗಾಂಧಿಯವರು ಹೇಳಬೇಕು ಎಂದು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನನಗಾಗಿ ಬಿಜೆಪಿಯ ಬಾಗಿಲು ತೆರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.










