ನವದೆಹಲಿ: ಬಿಜೆಪಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿರುವ ಶೆಟ್ಟರ್, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.
ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧನ್ಯವಾದ ತಿಳಿಸುತ್ತೇನೆ ಎಂದರು.










