ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿಯಿದ್ದರೆ ದೇಶ ಬಿಟ್ಟು ಹೋಗಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಭೂಪಟದಲ್ಲಿ ಪಾಕಿಸ್ತಾನ ಇಲ್ಲವಾಗಿದ್ದರೆ ಬಿಜೆಪಿ ಒಂದು ಮತ ಪಡೆಯುತ್ತಿರಲಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ಪುತ್ರ, ಮಾಜಿ ಮುಖ್ಯಮಂತ್ರಿ ಆಗಿ ಕುಮಾರಸ್ವಾಮಿ ಅವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಅವರಿಗೆ ಇತ್ತೀಚಿಗೆ ಪಾಕ್ ಮೇಲೆ ಪ್ರೀತಿ ಹೆಚ್ಚಾಗುತ್ತಿದೆ. ಪಾಕ್ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ದೇಶ ಬಿಟ್ಟು ಹೋಗಲಿ. ಭಾರತ ದೇಶ ಪಾಕ್ ಮೇಲೆ ಅಷ್ಟೊಂದು ಅವಲಂಭಿತವಾಗಿಲ್ಲ. ಇದು ಹಿಂದೂ ರಾಷ್ಟ್ರ ಇಲ್ಲಿ ಎಲ್ಲರೂ ಸಮಾನರಂತೆ ಬಾಳಬೇಕು. ಹೀಗಾಗಿ ದೇಶ ಒಡೆಯುವ ಷಡ್ಯಂತ್ರಕ್ಕಾಗಿ ಇಲ್ಲಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಗ್ಲಿಷ್ ಪದ ಬಳಸಿ ಟೀಕಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಸಿದ್ದರಾಮಯ್ಯ ಅವರು ಎಲ್ಲೂ ಕಾಣಿಸುತ್ತಿಲ್ಲ. ಅವರು ಈಗಾ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ಸ್ಥಾನಕ್ಕೆ ಲಾಬಿ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಡೆತ್ ಆಗಿರುವ ಪಕ್ಷ ಆಗಿದೆ ಎಂದು ವಾಗ್ದಾಳಿ ನಡೆಸಿದರು.










