ರಾಮನಗರ : ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಬಳಿಯ ಅಮಲೀಪುರದ ನಿವಾಸಿ ಪ್ರದೀಪ್ (47) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಸಾವಿಗೂ ಮುನ್ನ ರಾಜಕಾರಣಿಯ ಹೆಸರು, ಉದ್ಯಮಿಗಳ ಹೆಸರನ್ನು ಡೆತ್‌ನೋಟ್ ನಲ್ಲಿ ಬರೆದಿದ್ದಾರೆ.
ಡೆತ್‌ನೋಟ್ ನಲ್ಲಿ ಏನಿದೆ?
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹಾಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್‌ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಕೂಡಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










