ಚಾಮರಾಜನಗರ: ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹುಲ್ಲೇಗಾಳ ಗ್ರಾಮದ ಲಕ್ಷ್ಮಿ(36) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಿಂದ ಸುಮಾರು 20 ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.
ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವಾಗ ತಾಳು ಬೆಟ್ಟದಲ್ಲಿ ಸುಮಾರು 15ಕ್ಕೂ ಹೆಚ್ಚು ಪಾದಯಾತ್ರೆಗಳು ಹೋಗುತ್ತಿರುವುದನ್ನು ಗಮನಿಸಿದ ಇವರು ಸಹ ಪಾದಯಾತ್ರೆಯ ಮೂಲಕ ಹೋಗುವುದಕ್ಕೆ ತೀರ್ಮಾನಿಸಿ ಅವರ ಜೊತೆಯಲ್ಲಿಯೇ ಪಾದಯಾತ್ರೆಗೆ ಹೊರಟಿದ್ದರು.
ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂತರ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ಶವವನ್ನು ಮಲೆ ಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.










