ಕುಸ್ತಿ ಫೆಡರೇಷನ್ ಮುಖ್ಯಸ್ಥರ ಲೈಂಗಿಕ ಕಿರುಕುಳ ಆರೋಪ – ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ.

68
firstsuddi

ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೆಹಲಿಯ ಜಂತರ್ ಮಂತರ್ ನಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಮಹಿಳಾ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಅವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭೇಟಿಯಾಗಿದ್ದಾರೆ.

ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ನಂತರ ದೆಹಲಿ ಪೊಲೀಸರು ನಿನ್ನೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಕ್ರಮದ ಭರವಸೆಯ ನಂತರವೂ ಕುಸ್ತಿಪಟುಗಳು ತಕ್ಷಣ ಬಂಧನಕ್ಕೆ ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.