ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉತ್ತರ ಭಾರತದಲ್ಲಿ ಉಸಿರಾಡುವ ಗಾಳಿ ಕಲುಷಿತಗೊಂಡಿದೆ: ದೆಹಲಿ ಸಿಎಂ ಆತಿಶಿ.

34

ನವದೆಹಲಿ: ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ಗಾಳಿ ಕಲುಷಿತಗೊಂಡಿದ್ದು, ಉತ್ತರ ಭಾರತದೆಲ್ಲೆಡೆ ವೈದ್ಯಕೀಯ ತುರ್ತುಸ್ಥಿತಿ ಎದುರಿಸುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮಾಲಿನ್ಯದ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ ತಡೆಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.
ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದೆ. ಇದರಿಂದಾಗಿ ಉಸಿರಾಡಲು ಸಮಸ್ಯೆಯಾಗುತ್ತಿದೆ. ವೃದ್ಧರು ಮತ್ತು ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಆತಿಶಿ ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರಗಳ ಕುರಿತು ಮಾತನಾಡಿದ್ದಾರೆ. ದೆಹಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ 484ರಷ್ಟಿದೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರದಲ್ಲಿ ಟ್ರಕ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ ಸಾರ್ವಜನಿಕ ಯೋಜನೆಗಳ ನಿರ್ಮಾಣಗಳನ್ನೂ ನಿಲ್ಲಿಸಲಾಗಿದೆ.