ಕೆನಡಾ ಪಾರ್ಲಿಮೆಂಟ್​ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಸಂಸದ ಚಂದ್ರ ಆರ್ಯ.

60
firstsuddi

ಒಟ್ಟಾವಾ : ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ಕೆನಡಾದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಚಂದ್ರ ಆರ್ಯ ಅವರು ಕೆನಡಾ ಪಾರ್ಲಿಮೆಂಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ದ್ವಾರಳು ಗ್ರಾಮದ ವ್ಯಕ್ತಿಯೊರ್ವ ಕೆನಡಾ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಕೆನಡಾದ ಕನ್ನಡಿಗರು 2018ರಲ್ಲಿ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಹಾಗೂ ನಟ ಸಾರ್ವಭೌಮ ಡಾ.ರಾಜ್​ಕುಮಾರ್ ಹಾಡಿರುವ ‘ಎಲ್ಲಾದಾರೂ ಇರು ಎಂತಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳಿ ತಮ್ಮ ಮಾತು ಮುಗಿಸಿದ್ದಾರೆ.

ಚಂದ್ರ ಆರ್ಯ ಅವರು ಕರ್ನಾಟಕದ ತುಮಕೂರಿನ ಸಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಅವರು ಕನ್ನಡದಲ್ಲಿ ಮಾತನಾಡುತ್ತಿರುವ ವಿಡಿಯೋ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಚಂದ್ರ ಆರ್ಯ ಅವರ ಭಾಷಾ ಪ್ರೇಮ ಕಂಡು ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.