ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಿ : ಕೇಂದ್ರಕ್ಕೆ ಸುಪ್ರೀಂ ಆದೇಶ…

96
firstsuddi

ನವದೆಹಲಿ : ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ನ ಮೂವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 6 ವಾರಗಳೊಳಗೆ ಮಾರ್ಗಸೂಚಿಗಳನ್ನು ರೂಪಿಸಲು ತಿಳಿಸಿದೆ.

ಕೋವಿಡ್ ನಿಂದ ಮೃತ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲು ಆಗಲ್ಲ. ಹಾಗಾಗಿ ಎನ್ ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ ರೂಪಿಸುವಂತೆ ಸೂಚಿಸಿದೆ. ಕೋವಿಡ್ ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸುಪ್ರೀಂಕೋರ್ಟ್ ಎನ್ ಡಿಎಂಎಗೆ ನಿರ್ದೇಶನ ನೀಡಿದೆ. ಇದೇ ವೇಳೆ ಪರಿಹಾರ ನೀಡುವ ಬಗ್ಗೆ ಎನ್ ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಹಾಗೂ ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ ಎಂದು ಎನ್ ಡಿಎಂಗೆ ಸುಪ್ರೀಂಕೋರ್ಟ್ ಚಾಟಿ ಬೀಸಿತು. ಎನ್ ಡಿಎಂಎ ಆರು ವಾರಗಳಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾರ್ಗಸೂಚಿ ರೂಪಿಸಬೇಕು. ಪರಿಹಾರದ ಮೊತ್ತ ಸರ್ಕಾರ, ಎನ್ ಡಿಎಂಗೆ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ, ಕೊರೊನಾದಿಂದ ಮೃತರ ಕುಟುಂಬಕ್ಕೆ ವಿಪತ್ತು ಕಾಯ್ದೆಯಡಿ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಅಲ್ಲದೇ ಕೊರೊನಾದಿಂದ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಮರಣ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಬಗ್ಗೆಯೂ ಅರ್ಜಿದಾರರು ಮನವಿ ಮಾಡಿದ್ದರು.