ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನಲೆ ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಪತ್ರ ಬರೆದಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ. ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ.
ಕೇಂದ್ರಕ್ಕೆ ಈ 5 ರಾಜ್ಯಗಳು ನೀಡಿರುವ ಅಂಕಿ ಅಂಶಗಳ ಪ್ರಕಾರ, ಕೇರಳದ 11 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ತಮಿಳುನಾಡಿನ 2 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ.










