ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ ಶಹಬಾಸ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಒಂದೆಡೆ ಕೊರೊನಾ ವಾರಿಯರ್ಸ್‍ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ, ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡ್ತೀರಿ. ಇದೇನಾ ಕೊರೊನಾ ವಾರಿಯರ್ಸ್‍ಗೆ ಕೊಡುವ ಗೌರವ?
ಕೊರೊನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ, ಮೊದಲು, ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ, ಈಗ ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ? ಎಂದು ಟ್ವೀಟ್ ಮಾಡಿದ್ದಾರೆ.










