ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ.ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ ಎಂದರು. ಕೊವಿಡ್ ಸಮಯದಲ್ಲಿ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ ಎಫ್‍ಐಆರ್ ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ ಎಫ್‍ಐಆರ್ ದಾಖಲಿಸಬೇಕೆಂದು ಎಸ್ಐಟಿ ನಿರ್ಧರಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.










