ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ…

44
firstsuddi

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಇದರಿಂದ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ.

ಅಕ್ರಮ ಗಣಿಗಾರಿಕೆ ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್ 30 ರಂದು ಸಿಬಿಐ ಮನವಿ ಮಾಡಿತ್ತು. ಸರ್ಕಾರದದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿತ್ತು. 5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಪ್ರತಿಕ್ರಿಯೆ ತಿಳಿಸಲು ಖಡಕ್ ಸೂಚನೆ ಕೊಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಸರ್ಕಾರ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇಂದು ಅರ್ಜಿ ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್ ಗೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು. ಆಸ್ತಿ ಜಪ್ತಿಗೆ ಸರ್ಕಾರದ ಅನುಮತಿ ನೀಡಿದ ಕಾರಣ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇತ್ಯರ್ಥಗೊಳಿಸಿದೆ.