ಗುಲಾಂ ನಬಿ ಆಜಾದ್ ಬೆಂಬಲಿಸಿ 51 ಕಾಂಗ್ರೆಸ್ ನಾಯಕರು ರಾಜೀನಾಮೆ…

53
firstsuddi

ನವದೆಹಲಿ : ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 51 ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ 51 ಮಂದಿ ಸಾಮೂಹಿಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ 73 ವರ್ಷದ ಆಜಾದ್ ಅವರು ಕಳೆದ ವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಜತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ, ಆಜಾದ್ ಪಕ್ಷವನ್ನು “ಸಮಗ್ರವಾಗಿ ನಾಶಪಡಿಸಲಾಗಿದೆ” ಎಂದು ಆರೋಪಿಸಿದ್ದು, ಇದಕ್ಕೆ ರಾಹುಲ್ ಗಾಂಧಿಯೇ ಕಾರಣ ಎಂದು ವಾಗ್ದಾಳಿ ನಡೆಸಿದ್ದರು. ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವುದಾಗಿ ಆಜಾದ್ ಹೇಳಿದ್ದಾರೆ.