‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ…

67
firstsuddi

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಕೆ ಮಾಡಬಹುದು.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ಹೇಳಿದರು.
ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ ಎಂದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಉಚಿತವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಾಕಾಂಕ್ಷಿಯ ಯೋಜನೆಯಾಗಿದ್ದು, ಈ ಮೂಲಕ ಮನೆಯ ಯಜಮಾನಿ ಶಕ್ತಿ ಶಾಲಿಯಾಗುತ್ತಾಳೆ. ಆಗ ಸಮಾಜದ ಅಭಿವೃದ್ಧಿಯಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‍ನವರಿಗೆ ಈ ಯೋಜನೆಯ ಲಾಭ ಸಿಗುತ್ತದೆ ಎಂದು ತಿಳಿಸಿದರು.

ಈ ಯೋಜನೆಗೆ ತೆರಿಗೆ ಕಟ್ಟುವವರು ಅರ್ಜಿ ಸಲ್ಲಿಸಿದರೆ ಅದು ರಿಜೆಕ್ಟ್ ಆಗಲಿದೆ. ಇ ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಆದ್ದರಿಂದ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.