ಚನ್ನಪಟ್ಟಣ ಉಪಚುನಾವಣೆ: ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಗರಿಗೆದರಿದ ರಾಜಕೀಯ ಚಟುವಟಿಕೆ.

32

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ (ಇಸಿಐ) ಇನ್ನೂ ಪ್ರಕಟಿಸದಿದ್ದರೂ, ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಗುರುವಾರ ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡಸಿದ್ದಾರೆ. ಈ ನಡುವೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಚನ್ನಪಟ್ಟಣ ಕ್ಷೇತ್ರಕ್ಕೆ 300 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಘೋಷಣೆ ಮಾಡಿ, ರಾಜಕೀಯ ಚಟುವಟಿಕೆ ಆರಂಭಿಸಿದ್ದಾರೆ. ಚನ್ನಪಟ್ಟಣದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದ ಡಿಕೆ.ಶಿವಕುಮಾರ್ ಅವರು. ಇನ್ನೊಂದು ವಾರದಲ್ಲಿ ಉಪಚುನಾವಣೆಯ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಪ್ರಸ್ತುತ ನಾನು ಅಭ್ಯರ್ಥಿ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಮತದಾರರು ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಚಲಾಯಿಸುವಂತೆ ವಿನಂತಿಸುತ್ತಿದ್ದೇನೆ. ಅಭ್ಯರ್ಥಿಯ ಬದಲು ನನ್ನ ಮುಖ ನೋಡಿ ಮತ ಹಾಕುವಂತೆ ಮತದಾರರಲ್ಲಿ ವಿನಂತಿಸುತ್ತೇನೆಂದು ಮನವಿ ಮಾಡಿದ್ದರು. ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ 5,000 ಮನೆಗಳನ್ನು ವಿತರಿಸಿದ್ದು, ಪ್ರತಿ ಗ್ರಾಮ ಪಂಚಾಯಿತಿ 100-150 ಮನೆಗಳನ್ನು ಪಡೆಯುತ್ತಿದೆ. ಚನ್ನಪಟ್ಟಣ ತಾಲೂಕಿನ ಪ್ರತಿ ಪಂಚಾಯಿತಿಯಲ್ಲಿ 2-5 ಕೋಟಿ ರೂ.ಗಳ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದರು