ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಇಂದು ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬದವರ ಜೊತೆ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ಕೆಂಗಲ್ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೇವರಲ್ಲಿ ಒಳ್ಳೆಯ ಪ್ರಾರ್ಥನೆ ಮಾಡಿದ್ದೇನೆ. ತಾತ ದೇವೇಗೌಡರು, ತಂದೆ ಕುಮಾರಣ್ಣ, ಪತ್ನಿ ರೇವತಿ ಜೊತೆಗೂಡಿ ಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟಕ್ಕೆ ತೊಂದರೆ ಆಗದಂತೆ ನಾವು ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸ ಉಳಿಸುವ ಕೆಲಸ ಮಾಡುತ್ತೇನೆ. ಮೂರು ಕ್ಷೇತ್ರದ ಜನರ ಜೊತೆಗೆ ಚರ್ಚೆ ಮಾಡಿದ್ದೇನೆ. ನನ್ನ ಪರವಾಗಿ ಎರಡು ಪಕ್ಷದ ಕಾರ್ಯಕರ್ತರು ಅತೀ ಉತ್ಸಾಹದಿಂದ ಕೆಲಸ ಮಾಡ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ನನಗೆ ಜನರ ಬಗ್ಗೆ ಸಂಪೂರ್ಣ ವಿಶ್ವಾಸ ಇದೆ, ಚನ್ನಪಟ್ಟಣದಲ್ಲಿ ಒಬ್ಬ ಯುವಕನಿಗೆ ಕೆಲಸ ಮಾಡಲು ಜನರು ಅವಕಾಶ ನೀಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.










