ಚನ್ನಪಟ್ಟಣ ಉಪಚುನಾವಣೆ ಸಿಎಂ ಸಿದ್ದರಾಮಯ್ಯ, ಭೇಟಿ ಮಾಡಿದ ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್.

34

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ರಾಜಕಾರಣ ಹೊಸ ಸಂಚಲನ ಮೂಡಿಸಿದೆ. ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್, ಕೆಲವೊಂದು ಚುನಾವಣೆ ಸಂಬಂಧ ಚರ್ಚೆ ನಡೆಸಿ ನಂತರ ಇಬ್ಬರು ಒಂದೇ ಕಾರಿನಲ್ಲಿ ಸಿಎಂ.ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದರು.
ಸಿಎಂ.ಸಿದ್ದರಾಮಯ್ಯನವರ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚುನಾವಣ ಸಂಬಂಧಿತ ರಾಜಕೀಯ ಮಾತುಕತೆ ನಡೆಸಿದರು. ಇವರ ಜೊತೆ ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಜರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಯೋಗೇಶ್ವರ್ ಅವರ ಆಶೀರ್ವಾದ ಪಡೆದರು. ನಂತರ ಸಿದ್ದರಾಮಯ್ಯ ಅವರು ಯೋಗೇಶ್ವರ್ ಅವರ ಬೆನ್ನು ತಟ್ಟಿ ಬರಮಾಡಿಕೊಂಡರು. ಸಿಎಂ ಭೇಟಿ ಬಳಿಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸಿ.ಪಿ.ಯೋಗೇಶ್ವರ್ ಈಗಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಕೂಡ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಕಚೇರಿಗೆ ತೆರಳಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅವರೇ ತಿಳಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಅವರೆ ಘೋಷಿಸಿದ್ದರು. ಈ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದರು. ಆದರೆ ಇದೀಗ ಕೊನೆ ಕ್ಷಣದಲ್ಲಿ ಯೋಗೇಶ್ವರ್ ತಮ್ಮ ಹಾದಿ ಬದಲಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.