ಚಿಕ್ಕಮಗಳೂರು : ಚಾಮರಾಜನಗರದಲ್ಲಿ ಆಮ್ಲಜನಕ ಪೂರೈಕೆಯಿಲ್ಲದೇ ಕೊರೊನಾ ಸೋಂಕಿತರು ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್. ದೇವರಾಜ್ ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ದಿವ್ಯ ನಿರ್ಲಕ್ಷ್ಯ ಧೋರಣೆ ಯನ್ನು ಬಿಡಬೇಕು. ಪ್ರಕರಣ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕು. ಸಾವಿಗೀಡಾದವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಆಮ್ಲಜನಕವನ್ನು ರಾಜ್ಯಾದ್ಯಂತ ಯಾವುದೇ ಅಡೆತಡೆಯಿಲ್ಲದೇ ಸರಬರಾಜು ಮಾಡಬೇಕು. ಕೊರೊನಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಿಬ್ಬಂದಿ ಯನ್ನು ಹೆಚ್ಚಿಸಬೇಕು. ಯಾವುದೇ ಜಿಲ್ಲೆಯಲ್ಲೂ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಚಾಮರಾಜನಗರದ ಪ್ರಕರಣದಲ್ಲಿ ರಾಜ್ಯಸರ್ಕಾರ ಮತ್ತು ಅಲ್ಲಿನ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಎಂದಿರುವ ದೇವರಾಜ್ ರಾಜ್ಯಸರ್ಕಾರ ಇನ್ನಾದರೂ ಎಚ್ಚೆತ್ತು ಸಾವು ನೋವುಗಳನ್ನು ತಡೆಗಟ್ಟಬೇಕು. ಎಲ್ಲಾ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಕೊರೊನಾ ಮುಗಿಯುವವರೆಗೂ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಸಲಹೆ ಮಾಡಿದ್ದಾರೆ.
ನಮ್ಮ ಜಿಲ್ಲೆಯ ಲೋಕಸಭಾ ಸದಸ್ಯರೂ ಸೇರಿದಂತೆ ಜನಪ್ರತಿನಿಧಿಗಳು ಸಹ ತಿಂಗಳಿಗೊಮ್ಮೆ ಭೇಟಿ ನೀಡುವುದನ್ನು ಬಿಟ್ಟು ಕೊರೊನಾ ಮುಗಿಯುವವರೆಗೂ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿ ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.










