ಚಿಕ್ಕಮಗಳೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಳಸಿ (15) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಇನ್ನೋರ್ವ ವಿದ್ಯಾರ್ಥಿನಿ ನಿವೇದಿತ (14) ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಅತಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹರಿದ ಬಸ್ ಕೊನೆಗೆ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಮೇಲ್ಚಾವಣಿ ಸಂಪೂರ್ಣ ಜಖಂಗೊಂಡಿದೆ.
ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಧಿಕ ವೇಗದ ಖಾಸಗಿ ಬಸ್ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










