ಚಿಕ್ಕಮಗಳೂರು : ಮನುಷ್ಯರು ಸುಂದರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಎಲ್ಲವೂ ಜಾನಪದದಲ್ಲಿವೆ : ಅರಳಿ ನಾಗರಾಜ್

829
firstsuddi

ಚಿಕ್ಕಮಗಳೂರು : ಮನುಷ್ಯರು ಸುಂದರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಎಲ್ಲವೂ ಜಾನಪದದಲ್ಲಿವೆ ಎಂದು ರಾಜ್ಯ ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ್ ಹೇಳಿದರು.
ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನ ನಗರದ ಸಂತ ಜೋಸೇಫರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಜಾನಪದ ಸಂಭ್ರಮ-ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾನಪದ ನಮ್ಮ ಸಂಸ್ಕೃತಿಯ ತಾಯಿ ಬೇರು, ಅದನ್ನು ಮೈಗೂಡಿಸಿಕೊಳ್ಳುವುದರಿಂದ ನಾವು ಸುಂದರವಾದ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಯಾವುದೇ ಸರ್ಕಾರ ಅಥವಾ ವಿಶ್ವವಿದ್ಯಾಲಯಗಳು ಮಾಡಲಾಗದಷ್ಟು ಕೆಲಸವನ್ನು ಜಾನಪದದಲ್ಲಿ ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ|| ಎಸ್. ಬಾಲಾಜಿ ಮಾಡಿದ್ದು, ಅವರಿಗೆ ಪ್ರಶಸ್ತಿ ನೀಡುತ್ತಿರುವುದು ತಮಗೆ ಹೆಮ್ಮೆ ತಂದಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಬಸವರಾಜ ನೆಲ್ಲಿಸರ ಮಾತನಾಡಿ ಜಾಗತೀಕರಣ ಮತ್ತು ಆಧುನೀಕರಣದ ಭರದಲ್ಲಿ ಇಂದು ಅಂತಃಕರಣ ಮರೆಯಾಗುತ್ತಿದೆ, ನಾವು ನಮ್ಮ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಸೇರಿದಂತೆ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ, ಜಾನಪದ ತಾಯಿಯನ್ನು ಮರೆಯುತ್ತಿದ್ದೇವೆ ಎಂದು ವಿಷಾದಿಸಿದರು.
ಜಾನಪದವನ್ನು ಮೈಗೂಡಿಸಿಕೊಳ್ಳುವ ಮೂಲಕ ಇಂದಿನ ಯುವಜನತೆ ನಮ್ಮ ಹೆಜ್ಜೆ ಗುರುತುಗಳನ್ನು ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ಸಲಹೆ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನದ ಅಧ್ಯಕ್ಷ ಸೂರಿ ಶ್ರೀನಿವಾಸ್ ಜಾನಪದದ ಉಳಿವಿಗೆ ಅವಿರತವಾಗಿ ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಡಾ|| ಎಸ್.ಬಾಲಾಜಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ|| ಎಸ್.ಬಾಲಾಜಿ ಅವರಿಗೆ ಸಮಾರಂಭದಲ್ಲಿ ಜಾನಪದ ಬಾಲಾಜಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸುಗಮ ಸಂಗೀತ ಗಂಗಾದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಾಹಿತಿ ಚಟ್ನಳ್ಳಿ ಮಹೇಶ್ ಜಾನಪದರು ಮತ್ತು ಸಂಸ್ಕೃತಿ ವಿಷಯ ಕುರಿತು ಉಪನ್ಯಾಸ ನೀಡಿದರು. ಹಿರಿಯ ಜಾನಪದ ಕಲಾವಿದೆ ಮುಗುಳಿ ಲಕ್ಷ್ಮೀದೇವಮ್ಮ, ಬಿಜಾಪುರದ ಕಲಾವಿದ ಬಾಳನಗೌಡ ಪಾಟೀಲ್ ಅವರಿಂದ ಜಾನಪದ ಗೀತೆಗಳ ಗಾಯನ ನಡೆಯಿತು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ|| ಮಂಜುಳಾ ಹುಲ್ಲಹಳ್ಳಿ, ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಆರ್.ಜಗದೀಶ್, ಬಕ್ಕಿಮಂಜುನಾಥ್, ಅಜ್ಜಂಪುರ ಎಸ್.ಶೃತಿ, ಎ.ಆರ್.ಪ್ರಕಾಶ್ ಉಪಸ್ಥಿತರಿದ್ದರು.