ಚಿಕ್ಕಮಗಳೂರು : ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿಗಳು ಓದಿಗೆ ಮಾತ್ರ ಮಹತ್ವ ನೀಡಬೇಕು ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂಇಎಸ್ ಸ್ನಾತಕೋತ್ತರ, ಪದವಿ ಮತ್ತು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಶನಿವಾರ ನಡೆದ ರೆಡ್ಕ್ರಾಸ್, ಎನ್.ಎಸ್.ಎಸ್ ಘಟಕ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ ಅವುಗಳಿಗೆ ಆಕರ್ಷಿತರಾದರೆ ವಿದ್ಯಾಭ್ಯಾಸ ಮೊಟುಕಾಗುತ್ತದೆ ಎಂದು ಎಚ್ಚರಿಸಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮುಂದುವರಿಯಬೇಕಾದರೆ ವಿದ್ಯಾರ್ಥಿಗಳು ಶಿಕ್ಷಣವನ್ನು ಸವಾಲಾಗಿ ಸ್ವೀಕರಿಸಬೇಕು, ಹೆಚ್ಚು ಅಂಕಗಳಿಸುವತ್ತ ಗಮನ ಹರಿಸಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ|| ಕುಮಾರ್ ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಉತ್ತಮ ಹವ್ಯಾಸ ಮತ್ತು ಒಳ್ಳೆಯ ಅಭಿರುಚಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯಕುಮಾರ್ ಮಾತನಾಡಿ ಸದ್ಯದಲ್ಲೇ ಸಂಸ್ಥೆ ವತಿಯಿಂದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಚೇಂಬರ್ ಆಫ್ ಕಾಮರ್ಸ್ನ ಕಾರ್ಯದರ್ಶಿ ಕೆ.ಎನ್.ಮಂಜುನಾಥ ಭಟ್ ಮಾತನಾಡಿ ತಮ್ಮ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಬ್ಯಾಂಕಿಂಗ್, ಎಲ್.ಐ.ಸಿ, ಟ್ಯಾಲಿ ಕೋರ್ಸ್ ಸೇರಿದಂತೆ ವಿವಿಧ ತರಬೇತಿಗಳನ್ನೂ ನೀಡಲಾಗುತ್ತಿದೆ ಎಂದರು.
ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಪುರಸ್ಕಾರ ನೀಡಲಾಯಿತು.ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ ಡಾ|| ಜೆ.ಪಿ.ಕೃಷ್ಣೇಗೌಡ, ನಿರ್ದೇಶಕ ಕನಕರಾಜ್, ಆಡಳಿತಾಧಿಕಾರಿ ಶಾಂತಕುಮಾರಿ, ಕಾಲೇಜಿನ ಪ್ರಾಂಶುಪಾಲ ಡಾ|| ಹೆಚ್.ವಿಷ್ಣುವರ್ಧನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪಿ.ಎಸ್.ಸುಪ್ರಿಯಾ ಮತ್ತು ಹೆಚ್.ಎನ್.ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು, ರೋಮಿಯಾ ನಿಶಾ ಸ್ವಾಗತಿಸಿದರು, ಕಾವ್ಯ ವಂದಿಸಿದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿಗಳು ಓದಿಗೆ ಮಾತ್ರ ಮಹತ್ವ ನೀಡಬೇಕು : ಟಿ.ಡಿ.ರಾಜೇಗೌಡ.










