ಬೆಂಗಳೂರು : ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಶಾಸಕ ಜಮೀರ್ ಖಾನ್ ಪುತ್ರ, ಸ್ಯಾಂಡಲ್ ವುಡ್ ನಟ ಝೈದ್ ಖಾನ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.
ಬಳಿಕ ಮಾತನಾಡಿದ ಝೈದ್ ಖಾನ್, ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ಬನಾರಸ್ ಅನ್ನು ಬಾಯ್ಕಾಟ್ ಮಾಡುವ ಕೂಗು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಒಬ್ಬ ಕಲಾವಿದ. ನಾನು ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ ಜಮೀರ್ ಅಹಮದ್ ಅನ್ನೋ ಕಾರಣಕ್ಕಾಗಿ ವಿರೋಧಿಸಿದರೆ ಅದಕ್ಕೂ ನನಗೂ ಸಂಬಂಧ ಇಲ್ಲ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ಜನ ನನ್ನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ತಿಳಿಸಿದರು.










