ಚಿಕ್ಕಮಗಳೂರು : ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಕೆ.ಬಿ.ಸುಧಾ ಅವರು ಇಂದು ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಬಿಎಸ್‍ಪಿ ಕಚೇರಿಯಿಂದ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ತಾಲೂಕು ಚುನಾವಣಾಧಿಕಾರಿ ಕಿಶೋರ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜನತೆ ತಮ್ಮನ್ನು ನಂಬಿ ಚುನಾಯಿಸಿದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ, ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತವಾಗಿ ದುಡಿಯುವುದಾಗಿ ಹೇಳಿದರು.
ಕೆಳ ವರ್ಗಗಳ ಜನತೆಯ ಜೊತೆಗೆ ಎಲ್ಲಾ ಧರ್ಮಗಳು ಮತ್ತು ಎಲ್ಲಾ ಜಾತಿಗಳ ಜನರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಏಳಿಗೆಗಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಜನತೆ ದೇಶಕ್ಕೆ ಮತ್ತು ರಾಜ್ಯಕ್ಕೆ ಒಳ್ಳೆಯ ಅಧಿಕಾರ ಬೇಕು ತಮಗೆ ಭದ್ರತೆ,ರಕ್ಷಣೆ, ನೆಮ್ಮದಿಯ ಬದುಕು ಬೇಕು. ತಮ್ಮ ಅಭಿವೃದ್ಧಿಯಾಗಬೇಕು ಎಂದು ಹಪಹಪಿಸುತ್ತಾ ದೇಶದ ಮೂರನೇ ಅತಿದೊಡ್ಡ ಪಕ್ಷವಾದ ಬಹುಜನ ಸಮಾಜ ಪಕ್ಷದ ಕಡೆ ನೋಡುತ್ತಿದ್ದಾರೆ. ಹಾಗಾಗಿ ಈ ಬಾರಿ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.
ಬಿಎಸ್‍ಪಿ ಜಿಲ್ಲಾ ಉಪಾಧ್ಯಕ್ಷ ಕೆ.ಆರ್.ಗಂಗಾಧರ್, ಅಸೆಂಬ್ಲಿ ಸಂಯೋಜಕಿ ಕೆ.ಎಸ್. ಮಂಜುಳಾ, ನಗರ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಹಾಜರಿದ್ದರು.










